ರನ್ನ ಬೆಳಗಲಿ: ಆ. ೨೦: ಶ್ರೀ ಕ್ಷೇತ್ರ ಧರ್ಮಸ್ಥಳವು ಧಾರ್ಮಿಕ ಕ್ಷೇತ್ರವಾಗಿ ಮಾತ್ರ ಸೀಮಿತವಾಗದೆ, ಧರ್ಮ, ಸೇವೆ, ಶಿಕ್ಷಣ, ಆರೋಗ್ಯ, ಗ್ರಾಮಾಭಿವೃದ್ಧಿ ಹಾಗೂ ಮಾನವೀಯ ಮೌಲ್ಯಗಳ ವೃದ್ಧಿಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಜ್ಯೋತಿ? ರತ್ನ ಡಾ. ರಮೇಶ್ ಕುಮಾರ್ ಶಾಸ್ತ್ರಿ ಹೇಳಿದರು.
ಪಟ್ಟಣದ ಶ್ರೀ ಬಂದ ಲಕ್ಷ್ಮಿ ದೇವಸ್ಥಾನ ಆವರಣದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ನವಶಕ್ತಿ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕಾಗಿ ಮಾತೃಶ್ರೀ ಹೇಮಾವತಿ ಅಮ್ಮನವರ ಅಧ್ಯಕ್ಷತೆಯಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ಆರಂಭಗೊಂಡಿದ್ದು, ನಾಡಿನಾದ್ಯಂತ ಮಹಿಳೆಯರಲ್ಲಿ ಜ್ಞಾನ ಹಾಗೂ ಜಾಗೃತಿಯನ್ನು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ದೇವರ ಆರಾಧನೆಯೊಂದಿಗೆ ಮಾನವ ಸೇವೆಯನ್ನು ಬೆಸೆದು, ’ಮಾನವ ಸೇವೆಯೇ ಮಾಧವ ಸೇವೆ’ ಎಂಬ ಆಶಯವನ್ನು ಕಾರ್ಯರೂಪಕ್ಕೆ ತರುತ್ತಿರುವ ಧರ್ಮಸ್ಥಳದ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಯೋಗ ಶಿಕ್ಷಕ ರಾಘವೇಂದ್ರ ನೀಲನ್ನವರ ಮಾತನಾಡಿ, ಮಹಿಳಾ ಸಬಲೀಕರಣ, ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆ, ಗ್ರಾಮೀಣಾಭಿವೃದ್ಧಿ, ಕೃಷಿ ಪ್ರೋತ್ಸಾಹ ಹಾಗೂ ಉದ್ಯೋಗಾವಕಾಶಗಳ ಸೃಷ್ಟಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳು ಗ್ರಾಮೀಣ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗಿವೆ ಎಂದರು.
ಆರೋಗ್ಯ ಸೇವೆ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದ್ದು, ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಮೌಲ್ಯಗಳ ಸಂರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆ, ಸ್ವಚ್ಛತೆ ಮತ್ತು ಸಾಮಾಜಿಕ ಜಾಗೃತಿಗೂ ಆದ್ಯತೆ ನೀಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜಾತಾ ಮುರನಾಳ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುವರ್ಣ ನಂದಿಕೋಲಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ವೀಕ್ಷಣಾಧಿಕಾರಿ ವಿನಯಕುಮಾರ ವಿ., ಮೇಲ್ವಿಚಾರಕಿ ಚಂದ್ರಕಲಾ, ರೇಶ್ಮಿ ಟಿ.ಎನ್.ಓ ಹಾಗೂ ಉಮೇಶ ಲಮಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದ ಅಂಗವಾಗಿ ರಂಗೋಲಿ, ಸಂಗೀತ ಕುರ್ಚಿ ಹಾಗೂ ಜನಪದ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸೇವಾ ಪ್ರತಿನಿಧಿಗಳಾದ ಸುಧಾ ಜೈನಾಪುರ, ಸಾವಿತ್ರಿ ಜೈನಾಪುರ, ಶ್ರೀದೇವಿ ಮಂಟೂರ ಸೇರಿದಂತೆ ಜ್ಞಾನವಿಕಾಸ ಸದಸ್ಯರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.