ಬಳ್ಳಾರಿ,ಅ.29:.ಮಾನವ ಹಕ್ಕುಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ಧರ್ಮನಿರಪೇಕ್ಷ ಮೌಲ್ಯಗಳ ರಕ್ಷಣೆಯ ಉದ್ದೇಶದಿಂದ ಸೆಂಟರ್ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಸಂಘಟನೆಯ ವತಿಯಿಂದ ಅಕ್ಟೋಬರ್ 31ರಂದು ಬೆಂಗಳೂರಿನಲ್ಲಿ ರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಆರ್. ಸೋಮಶೇಖರಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯದಂತಹ ಮೂಲಭೂತ ಸೌಲಭ್ಯಗಳು ಜನಸಾಮಾನ್ಯರಿಗೆ ಕೈಗೆಟುಕದಂತಾಗುತ್ತಿದ್ದು, ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಯ ಅಗತ್ಯ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಜಾತ್ಯತೀತತೆಯ ಕುರಿತು ಜನಜಾಗೃತಿ ಮೂಡಿಸುವುದು ಸಮಾವೇಶದ ಉದ್ದೇಶವಾಗಿದೆ ಎಂದರು.
ಸಮಾವೇಶದಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ, ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಎಸ್.ಆರ್. ಹಿರೇಮಠ ಸೇರಿದಂತೆ ಗಣ್ಯರು ಭಾಗವಹಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಈ ಸಮಾವೇಶವನ್ನು ಪ್ರತಿಯೊಬ್ಬ ನಾಗರಿಕರು ಪಾಲ್ಗೊಂಡು ಯಶಸ್ವಿ ಮಾಡಬೇಕು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಜಾರ್, ದೂದ್ಪೀರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.