ಕೊಪ್ಪಳ ಸೆಪ್ಟೆಂಬರ್ 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಿಗೆ ಉಪವಿಭಾಗಾಧಿಕಾರಿ ಮೆಹಬೂಬ್‌ಜಿಲಾನಿ ಖುರೇಷಿ ಅವರು ಗುರುವಾರ (ಸೆ.10) ಭೇಟಿ ನೀಡಿ, ಮಕ್ಕಳ ವಾಸ್ತವ್ಯ, ಸ್ವಚ್ಛತೆ, ಆಹಾರ ವ್ಯವಸ್ಥೆ ಹಾಗೂ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಉಪವಿಭಾಗಾಧಿಕಾರಿಗಳು, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ಮಹತ್ವದ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದಾಗುವ ಪ್ರಯೋಜನಗಳು, ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವ, ಪೌಷ್ಟಿಕ ಆಹಾರದ ಅಗತ್ಯತೆ ಹಾಗೂ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಿಂದ ಉಂಟಾಗುವ ಆರೋಗ್ಯಕರ ಬೆಳವಣಿಗೆಯ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ಮಕ್ಕಳು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರೊಂದಿಗೆ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು, ಶಿಕ್ಷಣ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಪ್ರೋತ್ಸಾಹಿಸಿದರು.
ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳಿಗೆ ಸ್ವಚ್ಛ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು, ಗುಣಮಟ್ಟದ ಮತ್ತು ಪೌಷ್ಟಿಕ ಆಹಾರ ಒದಗಿಸುವುದು ಹಾಗೂ ಮಕ್ಕಳ ಆಸಕ್ತಿ ಮತ್ತು ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಯೋಗ, ಸಂಗೀತ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಉಪವಿಭಾಗಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳ ಅಧೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.
****