ಕೊಪ್ಪಳ ಆಗಸ್ಟ್ 19: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 28 ರಂದು ಜಿಲ್ಲಾಡಳಿತದಿಂದ ಆಚರಿಸಲಾಗುವ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬAಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.
ಆಗಸ್ಟ್ 28 ರಂದು ಆಚರಿಸಲಾಗುವ ಶ್ರೀ ನುಲಿಯ ಚಂದಯ್ಯ ಅವರ ಜಯಂತಿ ಆಚರಣೆ ಅಂಗವಾಗಿ ಮಂಗಳವಾರAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಆದೇಶದಂತೆ ಆಗಸ್ಟ್ 28 ರಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಅಧೀನ ಕಚೇರಿಗಳಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಗವಿಮಠದಿಂದ ಸಾಹಿತ್ಯ ಭವನದವರೆಗೆ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಅದ್ಧೂರಿಯಾಗಿ ನಡೆಯಲಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ವಸತಿ ಶಾಲೆಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿಯೂ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಅವರು ಸೂಚನೆ ನೀಡಿದರು.
ಮೆರವಣಿಗೆ ಹಾಗೂ ಸಾಹಿತ್ಯ ಭವನದ ವೇದಿಕೆ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಸಂಚಾರ ಪೊಲೀಸ್ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಕಲ್ಪಿಸಬೇಕು. ನಗರಸಭೆ ವತಿಯಿಂದ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರವನ್ನು ಹೂವಿನಿಂದ ಅಲಂಕರಿಸುವುದು, ಸಾರೋಟನ್ನು ಶೃಂಗರಿಸುವುದು ಹಾಗೂ ಭಾವಚಿತ್ರ ಮತ್ತು ಸಾರೋಟಿಗೆ ಹೂವಿನ ಹಾರದ ವ್ಯವಸ್ಥೆ ಮಾಡಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾವಿದರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಮತ್ತು ಮೆರವಣಿಗೆ ಸಾಗುವ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಸಮಾಜದ ಮುಖಂಡರು ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಚರಿಸಬೇಕು. ಇದಕ್ಕೆ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ, ಸಮಾಜದ ಮುಖಂಡರಾದ ಶಂಬಣ್ಣ ಭಜಂತ್ರಿ, ಬಸವಣ್ಣ ಓಜನಹಳ್ಳಿ, ಲೋಕೇಶ್ ಭಜಂತ್ರಿ, ಲಕ್ಷö್ಮಣ ಭಜಂತ್ರಿ, ನಾಗಪ್ಪ ಭಜಂತ್ರಿ, ತಿಪ್ಪಣ್ಣ ಭಾಗ್ಯನಗರ ಸೇರಿದಂತೆ ಸಮಾಜದ ಇತರರು ಹಾಗು ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.