ಬಳ್ಳಾರಿ, ಜು. 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಭಾಗವಹಿಸಿ, ಮತದಾರರಿಗೆ ಅನುಕೂಲವಾಗುವಂತೆ ಹಲವು ಸಲಹೆಗಳನ್ನು ಅಧಿಕಾರಿಗಳ ಮುಂದಿಟ್ಟರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತದಾರರಿಗೆ ನೆರವಾಗಲು ಸಹಾಯ ಕೇಂದ್ರಗಳು, ಬಿ.ಎಲ್.ಒ. ಕೇಂದ್ರಗಳು ಹಾಗೂ ವೋಟರ್ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ, ಅವುಗಳ ವಿವರಗಳನ್ನು ಸಾರ್ವಜನಿಕರಿಗೆ ಪ್ರಕಟಿಸಬೇಕು ಎಂದು ಅವರು ಮನವಿ ಮಾಡಿದರು.
ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಆಟೋಗಳ ಮೂಲಕ ಜಾಗೃತಿ ಅಭಿಯಾನ ನಡೆಸಬೇಕು. ಅಲ್ಲದೆ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡುವ ವಿಧಾನ ಕುರಿತು ಕಾಲೇಜುಗಳಲ್ಲಿ ವಿಶೇಷ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಯುವ ಮತದಾರರಿಗೆ ತರಬೇತಿ ನೀಡಬೇಕು ಎಂದು ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೈರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.