ಬಳ್ಳಾರಿ. ನ. 20: : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಹಾಗೂ ಚರಂಡಿ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಯುವ ಜಾಗೃತಿ ವೇದಿಕೆ ಬಳ್ಳಾರಿ ತಾಲೂಕು ಘಟಕ ಒತ್ತಾಯಿಸಿದೆ.
ಈ ಕುರಿತು ವೇದಿಕೆಯ ಪದಾಧಿಕಾರಿಗಳು ಬಳ್ಳಾರಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ತಾಲೂಕಿನ ಕೊಳಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಗಲ್ಲು ಗ್ರಾಮ, ಜಾಲಿಹಾಳು, ಶಂಕರಬಂಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಲಮಾಮಿಡಿ, ರೂಪನಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಾಪುರ, ಬೈರದೇವನಹಳ್ಳಿ ಸೇರಿದಂತೆ ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆ ಮತ್ತು ಚರಂಡಿ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಿದ್ದಾರೆ ಇದು ಅತ್ಯಂತ ಬೇಸರದ ಸಂಗತಿಯಾಗಿದೆ. ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ಯುವ ಜಾಗೃತಿ ವೇದಿಕೆ ಬಳ್ಳಾರಿ ತಾಲೂಕು ಸಮಿತಿಯಿಂದ ಬಳ್ಳಾರಿ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ವಿ. ಹೊನ್ನೂರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಸುಂಡಿ ಚಂದು, ಚಾಗನೂರು ಅಧ್ಯಕ್ಷ ಎರಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಅಸುಂಡಿ ಆಂಜನೇಯ, ಉಪಾಧ್ಯಕ್ಷ ಕುಂಟನಾಳು ಬಿ. ಶ್ರೀನಿವಾಸ, ಸಂಘಟನಾ ಕಾರ್ಯದರ್ಶಿ ಜಾಲಿಹಾಳ್ ಬಾಲಾಂಜನಿ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದು, ಮನವಿ ಸಲ್ಲಿಸಿದರು.