ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಪಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನಿ ಸೇನೆಯು ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನಿರಂತರವಾಗಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ.
26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಏಪ್ರಿಲ್ 24 ರ ರಾತ್ರಿಯಿಂದ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಮತ್ತು ಕಾಶ್ಮೀರ ಕಣಿವೆಯಲ್ಲಿ ವಿವಿಧ ಸ್ಥಳಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಸತತ 9 ನೇ ದಿನವೂ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿದೆ. ಏಪ್ರಿಲ್ 30 ರಂದು ಕುಪ್ವಾರಾ, ಉರಿ ಮತ್ತು ಅಖ್ನೂರ್‌ಗಳಲ್ಲಿನ ನಿಯಂತ್ರಣ ರೇಖೆಯ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಯಿತು.