ಸರ್ಕಾರದ ಪ್ರಸಕ್ತ ಶೈಕ್ಷಣಿಕ ಸುತ್ತೋಲೆ ಪ್ರಶ್ನಿಸಿ ಅರ್ಜಿ : ಹೈಕೋರ್ಟ್​ ನೋಟಿಸ್

Ravi Talawar
ಸರ್ಕಾರದ ಪ್ರಸಕ್ತ ಶೈಕ್ಷಣಿಕ ಸುತ್ತೋಲೆ ಪ್ರಶ್ನಿಸಿ ಅರ್ಜಿ : ಹೈಕೋರ್ಟ್​ ನೋಟಿಸ್
WhatsApp Group Join Now
Telegram Group Join Now

ಬೆಂಗಳೂರು : ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಣೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಆಕ್ಷೇಪ ವ್ಯಕ್ತಪಡಿಸಿ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಲ್ಲಿಸಿರುವ ಅರ್ಜಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ (ರಿ) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಸುತ್ತೋಲೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು. ಅಷ್ಟರೊಳಗೆ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡು ನ್ಯಾಯಾಲಯಕ್ಕೆ ಒದಗಿಸಬೇಕು. ಏಕೆಂದರೆ, ಇದು ಇತರ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೂ ಬಾಧಿಸಲಿದೆ ಎಂದು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ 2(ಬಿ)ರಂತೆ ಎಲ್ಲಾ ಖಾಸಗಿ ಶಾಲೆಗಳು 2024-25ನೇ ಶೈಕ್ಷಣಿಕ ಸಾಲಿನ ಶುಲ್ಕವನ್ನು ತಮ್ಮ ಶಾಲೆಯ ವೆಬ್‌ಸೈಟ್‌ನಲ್ಲಿ ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ವೆಬ್‌ಸೈಟ್ (ಎಸ್‌ಎಟಿಎಸ್)ದಲ್ಲಿ ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸಲು ಹಾಗೂ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆರ್‌ಟಿಇ ಕಾಯ್ದೆ ಸೆಕ್ಷನ್ 13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು 2024ರ ಮೇ 20ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

 

WhatsApp Group Join Now
Telegram Group Join Now
Share This Article