ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ : ನಾಳೆ ಶಿಕ್ಷೆ ಪ್ರಕಟ

Hasiru Kranti
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ : ನಾಳೆ ಶಿಕ್ಷೆ ಪ್ರಕಟ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 1: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಮಹತ್ವದ ತೀರ್ಪು ನೀಡಿದ್ದಾರೆ. ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ.

ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್​ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿದೆ.

ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರೊರೆಸುತ್ತಾ ಕೋರ್ಟ್ ಹಾಲ್​ನಿಂದ ಪ್ರಜ್ವಲ್ ರೇವಣ್ಣ ನಿರ್ಗಮಿಸಿದರು.

ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜುಲೈ 30 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಬೇಕಿತ್ತು. ಆದರೆ, ಕೆಲವೊಂದು ಸ್ಪಷ್ಟೀಕರಣ ಬೇಕಿದ್ದರಿಂದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ಜಡ್ಜ್ ತಿಳಿಸಿದ್ದರು.

ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.

ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ  ಈಗಾಗಲೇ ಜಾಮೀನು ದೊರೆತಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.

WhatsApp Group Join Now
Telegram Group Join Now
Share This Article