ಬಳ್ಳಾರಿ,ಜ.21 :- ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಸಂತ ಜಾನರ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪತ್ರ ವ್ಯವಹಾರಾಧಿಕಾರಿ ಫಾದರ್ ಫ್ರಾನ್ಸಿಸ್.ಬಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಪ್ರದೇಶದಲ್ಲಿರುವ ಸಂತಜಾನ್ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ 2025-26ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ಶಿಕ್ಷಕರು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ನಮ್ಮ ಶಾಲೆಯಲ್ಲಿ ಆಯೋಜಿಸಿರುವುದು ಸಂತಸದ ವಿಷಯವಾಗಿದೆ ಎಂದರು.
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ನೋಡೆಲ್ ಅಧಿಕಾರಿ ಹಾಗೂ ವಿದ್ಯಾಧಿಕಾರಿ ಲಕ್ಷಿö್ಮದೇವಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ಅಡಕವಾಗಿರುವ ಕಲೆಗಳನ್ನು ಪ್ರೋತ್ಸಾಹಿಸಬೇಕು. ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದರು.
ಬಳ್ಳಾರಿ ಪೂರ್ವ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಸ್ತೂರಿ ಅವರು ಮಾತನಾಡಿ, ಒಂದು ಮಗುವಿನಲ್ಲಿನ ಕಲೆ ಹಾಗೂ ಪತ್ರಿಭೆ ಬಾಲ್ಯದಲ್ಲಿಯೇ ಬಿಂಬಿತಗೊಳ್ಳುತ್ತವೆ. ಅವುಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಮತ್ತು ಗುರುತಿಸುವ ಪೋಷಕರು, ಶಿಕ್ಷಕರು ಮುಖ್ಯವಾಗುತ್ತಾರೆ ಎಂದು ಹೇಳಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೊಟ್ರೇಶ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಮಕ್ಕಳು ಕೇವಲ ಆಟ-ಪಾಠಕ್ಕೆ ಸೀಮಿತರಾಗಬಾರದು; ಬದಲಾಗಿ ತಮ್ಮಲ್ಲಿನ ಸೂಕ್ತ ಪ್ರತಿಭೆಯನ್ನು ಸಹ ಹೊರಹಾಕಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ನಾವು ಊಹಿಸಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆಗಳ ಅನಾವರಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ ಅವರು ಮಾತನಾಡಿ, ಶಾಲಾ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುವ ಕೆಲಸ ಶಿಕ್ಷಕರು ಮಾಡಬೇಕು. ಪಾಠದ ಜತೆಗೆ ಕಲೆ ಮತ್ತು ಸಂಸ್ಕೃತಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ನಿಯೋಜಿತರಾದ ತೀರ್ಪುಗಾರರರು ಅತ್ಯಂತ ನಿಷ್ಪಕ್ಷಪಾತವಾಗಿ ಪ್ರತಿಭಾವಂತರನ್ನು ಆಯ್ಕೆ ಮಾಡಬೇಕು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆಯ್ಕೆಯಾದ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ನಮ್ಮ ಜಿಲ್ಲೆಯ ಹೆಚ್ಚಿನ ಮಕ್ಕಳು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಿಂಚಿ, ಹೆಚ್ಚಿನ ಪ್ರಶಸ್ತಿಗಳನ್ನು ತರುವುದರ ಮೂಲಕ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದಲ್ಲಿ ಶಾಲಾ ಮತ್ತು ಪ್ರೌಢ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಸಂತಜಾನರ ಪ್ರೌಢಶಾಲೆಯ ಮುಖ್ಯಗುರುಗಳಾದ ಶಾಂತುಶೀಲನ್, ಜಿಲ್ಲಾ ವಸ್ತು ವಿಷಯ ಪರಿವೀಕ್ಷಕರಾದ ವೇದಾವತಿ, ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭಾಸ್ಕರ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬಳ್ಳಾರಿ ಪೂರ್ವ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ವಿರೇಶಪ್ಪ, ಜಿಲ್ಲಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಸತ್ಯನಾರಾಯಣ ಸೇರಿದಂತೆ ಡಯಟ್ ಉಪನ್ಯಾಸಕರು, ವಿಷಯ ಪರಿವೀಕ್ಷಕರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ, ಅನುದಾನ ರಹಿತ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು, ಇತರರು ಉಪಸ್ಥಿತರಿದ್ದರು.
ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ : ಫ್ರಾನ್ಸಿಸ್.ಬಿ


