ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದರೂ ಜೂನ್ 4ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರದ ಆಡಳಿತ ಕಾರ್ಯಗಳಿಗೆ ತೊಡಕಾಗುತ್ತಿದೆ. ರಾಜ್ಯದ ಬರ ಪರಿಸ್ಥಿತಿ ಕುರಿತು ಸಭೆಗಳನ್ನು ನಡೆಸಲು ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.
ಈ ಕುರಿತು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತ ಮನೋಜ್ ಕುಮಾರ್ ಮೀನಾ ಅವರಿಗೆ ಪತ್ರ ಬರೆದಿದ್ದು, ಕರ್ನಾಟಕದ 236 ತಾಲ್ಲೂಕುಗಳಲ್ಲಿ 233 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಲಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಈ ಬಾರಿ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆಯಿದೆ. ಹಲವು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗುತ್ತಿದೆ. ಮುಂದಿನ ಎರಡು ತಿಂಗಳು ಶುದ್ಧ ಕುಡಿಯುವ ನೀರನ್ನು ನಾಗರಿಕರಿಗೆ ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವು ಒದಗಿಸುವ ಅನಿವಾರ್ಯತೆಯಿದೆ. ಈ ಬಗ್ಗೆ ಸರ್ಕಾರ ಕಾರ್ಯಪ್ರವೃತ್ತವಾಗಲು ಚುನಾವಣಾ ನೀತಿ ಸಂಹಿತೆಯನ್ನು ರಾಜ್ಯದಲ್ಲಿ ಸಡಿಲಗೊಳಿಸಿ ಎಂದು ಕೇಳಿಕೊಂಡಿದ್ದಾರೆ.