ಬಳ್ಳಾರಿ,ಮೇ 05 ಐದೂ ತಾಲೂಕುಗಳಲ್ಲಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳುವ ಕುರಿತು ರೈತರಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಿ ಮಾಹಿತಿ ಒದಗಿಸಬೇಕು. ಈ ಕುರಿತು ಕೃಷಿ, ತೋಟಗಾರಿಕೆ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ವತಿಯಿಂದ ಸಂಡೂರಿನ ನಂದಿಹಳ್ಳಿ ಪಿ.ಜಿ.ಹಳ್ಳಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಿವಿಧೆಡೆ ಕೆಲ ರೀತಿಯ ಬೆಳೆ ಬೆಳೆಯುತ್ತಾರೆ. ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಮಣ್ಣಿನ ಗುಣವನ್ನಾಧರಿಸಿ ರೈತರು ಬೆಳೆ ತೆಗೆಯಬೇಕು. ವಿವಿಧ ರೀತಿಯ ಸರ್ವ ರೀತಿಯ ಬೆಳೆ ಬೆಳೆಯಲು ಒಂದು ಮಾಸ್ಟರ್ ಪ್ಲಾನ್ ಮಾಡಬೇಕು. ಜಿಲ್ಲೆಯ ಯಾವ ಯಾವ ತಾಲೂಕಿನಲ್ಲಿ ಯಾವ ರೀತಿಯ ಮಣ್ಣು ಇದೆ. ಯಾವ ಕಡೆಗೆ ಯಾವ ರೀತಿ ಬೆಳೆಯುತ್ತಾರೆ ಎಂಬುದರ ಬಗ್ಗೆ ಅಧ್ಯಯನ ನಡೆಸಲು ಲ್ಯಾಬ್ ಆರಂಭಿಸುವ ಮೂಲಕ ಸಮಗ್ರ ವರದಿ ಸಂಗ್ರಹಿಸಬೇಕು. ಯಾವ ಮಣ್ಣಿನಲ್ಲಿ ಯಾವ ರೀತಿ ಬೆಳೆ ಬೆಳೆದರೆ ಹೆಚ್ಚು ಲಾಭವಾಗುತ್ತದೆ ಎಂಬುದರ ಬಗ್ಗೆ ಜಿಲ್ಲೆಯ ರೈತರಿಗೆ ಹೊಸದೊಂದು ಮಾರ್ಗದರ್ಶಿ ಯೋಜನೆ ರೂಪಿಸೋಣ ಎಂದು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದೇರೀತಿಯಾಗಿ ಜಿಲ್ಲೆಯಲ್ಲಿ ಮುಂಬರುವ ಜೂನ್ ನಿಂದ ಬಿತ್ತನೆ ಕಾರ್ಯಗಳು ಪ್ರಾರಂಭಗೊಳ್ಳಲಿವೆ. ಕಾಳಸಂತೆಯಲ್ಲಿ ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಎಚ್ಚರವಹಿಸಬೇಕು. ರೈತರಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವAತೆ ಮನವೊಲಿಸಬೇಕು. ಕೃಷಿ, ರೈತರ ವಿಷಯಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ತಾಲ್ಲೂಕುಗಳಲ್ಲಿ ವಿವಿಧೆಡೆ ಸಮರ್ಪಕ ಮೀನು ಮಾರುಕಟ್ಟೆಗಳಿಲ್ಲ, ಎಲ್ಲಿ ಬೇಕೆಂದರಲ್ಲಿ ಮಾರುವುದು ಕಂಡುಬರುತ್ತಿದ್ದು, ಅವರಿಗೆ ಪೂರಕವಾದ ಮೀನು ಮಾರುಕಟ್ಟೆ ಒದಗಿಸಬೇಕು ಎಂದು ಮೀನುಗಾರಿಕೆ ಉಪನಿರ್ದೇಶಕರಿಗೆ ತಿಳಿಸಿದ ಅವರು, ಇದೇ ವೇಳೆ ಜಿಲ್ಲಾಧಿಕಾರಿಗಳ ಗಮನಕ್ಕೂ ಈ ವಿಷಯ ತಂದರು.
ಜಿಲ್ಲೆಯಲ್ಲಿ ಅಸ್ತಮಾ, ಕಿಡ್ನಿ, ಕ್ಯಾನ್ಸರ್ ಸೇರಿದಂತೆ ಇತರೆ ಖಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಬೇಕಾಗುವಂತಹ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಹಾಗೂ ಸಮುದಾಯ ಆಸ್ಪತೆಗಳನ್ನು ಮೇಲ್ದರ್ಜೆಗೇರಿಸಲು ಇರುವ ಮಾನದಂಡ, ಚಿಕಿತ್ಸೆಗೆ ಬೇಕಾಗುವ ಅತ್ಯಾಧುನಿಕ ಉಪಕರಣಗಳು ಸೇರಿದಂತೆ ಯಾವುದೇ ವೈದ್ಯಕೀಯ ಸೌಕರ್ಯಗಳು ಬೇಕಿದ್ದರೆ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಈ ಕುರಿತು ಈಗಾಗಲೇ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಮಗುವೊಂದರ ಶೈಕ್ಷಣಿಕ ಬುನಾದಿಯಾದ ಅಂಗನವಾಡಿಗಳು ಸುಧಾರಣೆಯಾಗಬೇಕು. ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಅಂಗನವಾಡಿ ಕಟ್ಟಡಗಳು ಸ್ವಂತ ಜಾಗ ಹೊಂದಿರಬೇಕು ಎಂದರಲ್ಲದೇ, ಮಕ್ಕಳಿಗೆ, ಗರ್ಭಿಣಿ ಮಹಿಳೆಯರಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಕೆ ಮಾಡಬೇಕು. ಜಿಲ್ಲೆಯಲ್ಲಿ ಅಪೌಷ್ಠಿಕತೆ ಹೋಗಲಾಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರದ ನಿರ್ದೇಶನದಂತೆ 10 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಹೆಚ್ಚಾಗಿ ಅಕ್ರಮ ಪಡಿತರ ಸಾಗಾಣೆ ಸಂಬAಧಿಸಿದAತೆ ಪ್ರಕರಣಗಳು ದಾಖಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಮುಲಾಜಿಲ್ಲದೇ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.
*ಎಸ್ಎಸ್ಎಲ್ಸಿ ಫಲಿತಾಂಶ ಕುಸಿತ:*
ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಫಲಿತಾಂಶವು ಕುಸಿತಗೊಂಡಿದ್ದು, ಬೇಸರದ ಸಂಗತಿಯಾಗಿದೆ. ಮಕ್ಕಳಿಗೆ ಪ್ರಾಥಮಿಕ ಹಂತದ ಶಿಕ್ಷಣ ಬಹುಮುಖ್ಯವಾಗಿದ್ದು, ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣ ಒದಗಿಸಬೇಕು. ಇದಕ್ಕೆ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಶಿಕ್ಷಣ ಎಂದರೆ ಕೇವಲ ಕಟ್ಟಡವಲ್ಲ, ವೆಚ್ಚಧಾರಿತ ಉಪಕರಣಗಳಲ್ಲ, ಬದಲಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಯಾಗಿದೆ. ಹಾಗಾಗಿ ಶಿಕ್ಷಕರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಸÀಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಮಾತನಾಡಿ, ಸಂಡೂರು ಭಾಗದ ಗೊಲ್ಲರಹಟ್ಟಿಗಳಲ್ಲಿ ಹೆಣ್ಣುಮಕ್ಕಳು ಋತುಮತಿಯಾದಾಗ ಮತ್ತು ಹೆರಿಗೆಯಾದಾಗ ಅವರನ್ನು ಹೊರಗಿಡುವ ಮೌಢ್ಯ ಆಚರಣೆ ಇಲ್ಲಿದೆ. ಮೌಢ್ಯತೆ ಹಾಗೂ ಮೂಢನಂಬಿಕೆಗಳನ್ನು ಇನ್ನು ನಂಬುತ್ತಿದ್ದಾರೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಬೇಕು ಎಂದು ಪ್ರಸ್ತಾಪಿಸಿದರು.
ಸಂಡೂರು ಭಾಗದಲ್ಲಿ ಜನರ ಮನೆ ಬಾಗಿಲಿದೆ ಆರೋಗ್ಯ ಸೇವೆ ತಲುಪಿಸಲು “ಕ್ಲಿನಿಕ್ ಆನ್ ವ್ಹೀಲ್” ಎಂಬ ವಾಹನಗಳು ಸೇವೆ ನೀಡುತ್ತಿದ್ದು, ಇವುಗಳ ದುರುಪಯೋಗವಾಗುತ್ತಿರುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಶಾಸಕಿ ಅನ್ನಪೂರ್ಣ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೇದ್ರದ ಬಿಎಸ್ಎನ್ಎಲ್, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ರೈಲ್ವೆ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂಬAಧಿಸಿದ ಅಧಿಕಾರಿಗಳು ಪೂರಕ ಮಾಹಿತಿ ನೀಡದೇ ಇರುವ ಕುರಿತು ಸಂಸದರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ ಎಂದು ಮನವರಿಕೆ ಮಾಡಿದರು.
ಸಭೆಯಲ್ಲಿ ಜಲ ಜೀವನ್ ಮಿ಼ಷನ್, ಸ್ವಚ್ಛ ಭಾರತ್ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಸಭೆಗೂ ಮುನ್ನ ಹಿಂದಿನ ದಿಶಾ ಸಮಿತಿ ಸಭೆಯ ಅನುಪಾಲನಾ ವರದಿ ಬಗ್ಗೆ ಚರ್ಚಿಸಲಾಯಿತು.
ಸಭೆಗೂ ಮುನ್ನ ಸಂಸದರು, ಸ್ವ ಸಹಾಯ ಸಂಘಗಳ ಮಹಿಳೆಯರಿಂದ ತಯಾರಿಸಿದ ಆಹಾರ ಮತ್ತು ಆಹಾರೇತರ ಉತ್ಪನ್ನಗಳ ಮಳಿಗೆ ಉದ್ಘಾಟಿಸಿದರು.
ಈ ವೇಳೆ ಸಂಡೂರು ಪುರಸಭೆಯ ಅಧ್ಯಕ್ಷ ಸಿರಾಜ್ ಹುಸೇನ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ವಿಶ್ರೀಕೃದೇ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ
ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.