ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರುವಾಗಿದೆ.
ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.