ಕಾಂಗ್ರೆಸ್ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ: ಆರ್.ಅಶೋಕ ಆರೋಪ

Ravi Talawar
ಕಾಂಗ್ರೆಸ್ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ: ಆರ್.ಅಶೋಕ ಆರೋಪ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಗುರುವಾರ ಆರೋಪಿಸಿದರು.

ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದರು. ಕಾಂಗ್ರೆಸ್‌ ಸರ್ಕಾರ ಹಣ ಇದೆ ಎಂದು ಹೇಳುತ್ತಲೇ ಇದೆ. ಆದರೂ ಉತ್ತರ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಎಷ್ಟು ಹೂಡಿಕೆ ಬಂದಿದೆ, ಎಷ್ಟು ಬೆಳೆಹಾನಿ ಪರಿಹಾರ ಸಿಕ್ಕಿದೆ, ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ. ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರ್ಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಾಂಗ್ರೆಸ್‌ ಹೇಳಿದ್ದು ಏನು, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು ಎಂಬ ಬಗ್ಗೆ ಶಾಸಕರೇ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಸಾರಿಗೆ ಇಲಾಖೆ ನೌಕರರು ಬಂದ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಬಕಾರಿ ಇಲಾಖೆ ಗುತ್ತಿಗೆದಾರರು ಕೂಡ ಬಂದ್‌ ಮಾಡಲು ಮುಂದಾಗಿದ್ದರು. ಈ ನಡುವೆ ರಸ್ತೆ ಅಭಿವೃದ್ಧಿ, ಆಸ್ಪತ್ರೆ ನಿರ್ಮಾಣ, ಬೆಳೆಹಾನಿ ಪರಿಹಾರ ಯಾವುದಕ್ಕೂ ಹಣ ಇಲ್ಲ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು. ಅಬಕಾರಿ ಇಲಾಖೆಯಲ್ಲಿ ಪರವಾನಗಿಗೆ ಅರ್ಜಿ ಸಲ್ಲಿಸಿದಾಗ ಲಂಚ ಕೇಳಿದ ಧ್ವನಿಮುದ್ರಣ ಈಗ ಬಿಡುಗಡೆಯಾಗಿದೆ. ಕಾಂಗ್ರೆಸ್‌ ಕಾರ್ಯಕರ್ತ ಆಗಿರುವುದರಿಂದ 50% ರಿಯಾಯಿತಿ ಎಂದು ಅಧಿಕಾರಿ ಹೇಳಿದ್ದಾರೆ. ಇದು ಈಗ ಜಗಜ್ಜಾಹೀರಾಗಿದೆ ಎಂದು ಆರೋಪಿಸಿದ ಅವರು, ಈ ಭ್ರಷ್ಟಾಚಾರದ ವಿರುದ್ಧವೂ ಬಿಜೆಪಿ ಹೋರಾಟ ಮಾಡಲಿದೆ. ಇಷ್ಟು ಸಾಕ್ಷಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಪುಸ್ತಕ ಎಂದು ಹೇಳುತ್ತಿದ್ದಾರೆ. ದಾಖಲೆ ನೀಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಅಶೋಕ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳದ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ವಯೋವೃದ್ಧರು ಸಾವನ್ನಪ್ಪಿರುವ ಬಗ್ಗೆ ಸಂಪೂರ್ಣ ತನಿಖೆಗೆ ಒತ್ತಾಯಿಸುವುದಾಗಿ ಅವರು ಪ್ರತಿಜ್ಞೆ ಮಾಡಿದರು.

WhatsApp Group Join Now
Telegram Group Join Now
Share This Article