ಮಂಗಳೂರು,13: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ಚುನಾವಣೆ ಕಣ ರಂಗು ಪಡೆದಿದೆ. ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಪಕ್ಷದ ವರಿಷ್ಠರ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿರುವ ಅವರು, ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.
1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.