ಬೆಂಗಳೂರು: ಮತಗಳ್ಳತನದ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ಸಮಾವೇಶದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ಸಾಧ್ಯತೆ ಇದೆ.
ಈಗಾಗಲೇ ಗುರುವಾರ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿ ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ 10.30ರಿಂದ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಯಲಿದೆ. ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.