ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಅಣೆಕಟ್ಟೆಗಳು ವಾಡಿಕೆ ಅವಧಿಗಿಂತ ಮೊದಲೇ ಭರ್ತಿಯಾಗಿವೆ. ನದಿಗಳು ಮೈದುಂಬಿ ಹರಿಯುತ್ತಿವೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಇಂದು ಕೆಲ ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಹೊಸನಗರ, ಸಾಗರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಹೊಸನಗರ ಹಾಗೂ ಸಾಗರ ತಾಲೂಕುಗಳ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ. ಈ ಕುರಿತು ಹೊಸನಗರ ಹಾಗೂ ಸಾಗರ ತಾಲೂಕುಗಳ ತಹಶೀಲ್ದಾರ್ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.