ಬೆಂಗಳೂರು, ಮಾರ್ಚ್ 13: ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಮಂಗಳೂರಿಗೆ ಬರುವ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದ ಕಾರಣ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿಮಾನಗಳನ್ನು ಕಳುಹಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಎರಡು ವಿಮಾನಗಳನ್ನು ವಾಪಾಸ್ ಬೆಂಗಳೂರಿಗೆ ಹಿಂದುರುಗಿಸಲಾಗಿದೆ. ಮಂಗಳೂರಿನ ಬಜ್ಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರ ಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಬುಧವಾರ ಸಂಜೆ ವರ್ಷಧಾರೆ ಸುರಿದಿದ್ದು, ತಂಪೆರೆದಿದೆ. ಮೂಡಿಗೆರೆ, ಕಳಸ, ಎನ್ಆರ್ ಪುರ ತಾಲೂಕಿನ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ವರ್ಷದ ಮೊದಲ ಮಳೆಯ ಸಿಂಚನಕ್ಕೆ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿತ್ತು.