ಬೀದರ್, ಜನವರಿ 2: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆತಿದೆ. ಒಂದೆಡೆ, ಸಚಿನ್ ಬಳಿ ಗುತ್ತಿಗೆದಾರರ ಪರವಾನಿಗೆಯೇ ಇರಲಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ ಹೇಳಿದ್ದರೆ, ಮತ್ತೊಂದೆಡೆ ಪ್ರಕರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಎಂದು ಸಚಿನ್ ಸಹೋದರಿ ಸುರೇಖಾ ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
ಡೆತ್ ನೋಟ್ನಲ್ಲಿ ಉಲ್ಲೇಖವಾದ ಆರೋಪಿಗಳನ್ನು ಈವರೆಗೆ ತನಿಖೆಗೆ ಒಳಪಡಿಸಿಲ್ಲ. ತನಿಖಾಧಿಕಾರಿಗಳು ನಮ್ಮನ್ನು ಮಾತ್ರ ವಿಚಾರಣೆ ಮಾಡುತ್ತಿದ್ದಾರೆ. ಇಲ್ಲಿವರೆಗೆ ತನಿಖಾಧಿಕಾರಿಗಳು ಯಾವುದೇ ಮಾಹಿತಿ ಕೊಟ್ಟಿಲ್ಲ. ಎಫ್ಎಸ್ಎಲ್ ವರದಿ, ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆಯಲು ಪ್ರಯತ್ನಿಸುತ್ತೇವೆ ಎಂದು ಸುರೇಖಾ ಹೇಳಿದ್ದಾರೆ.