ಮೈಸೂರು: ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್ನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಆಮಿಷಕ್ಕೆ ಒಳಗಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಸಿಬಿಐ, ಇ.ಡಿ., ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಸಿದ್ರು.
ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ? ಎಂದು ಸಿಎಂ ಪ್ರಶ್ನೆ ಮಾಡಿದ್ರು.
ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ ಸುಖಾಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಜನರಿಗೆ ಕರೆ ನೀಡಿದರು.