ಬೆಂಗಳೂರು, ಜನವರಿ 22: ಯಲ್ಲಾಪುರದ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ, ಗಾಯಾಳುಗಳಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.