ನವದೆಹಲಿ, ಅಕ್ಟೋಬರ್ 13: ಕಳೆದ ತಿಂಗಳು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐ ನಡೆಸಲಿದೆ. ಈ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರಿಬ್ಬರ ಸರ್ವೋಚ್ಚ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಇದೇ ವೇಳೆ, ಸುಪ್ರೀಂಕೋರ್ಟ್ ಈ ಪ್ರಕರಣದ ಮೇಲ್ವಿಚಾರಣೆ ನಡೆಸಲು ಮೂರು ಸದಸ್ಯರ ಮಂಡಳಿಯನ್ನು ರಚಿಸಿದೆ. ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರಿಗೆ ಈ ಮಂಡಳಿಯ ನೇತೃತ್ವ ವಹಿಸಲಾಗಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆಯ ಮೇಲೆ ನಿಗಾ ಇಡುವಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ನ್ಯಾ| ರಸ್ತೋಗಿ ಅವರಿಗೆ ಕೋರ್ಟ್ ಮನವಿ ಮಾಡಿದೆ.