ನವದೆಹಲಿ: ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಸಂಬಂಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ತಂಡ ರಚಿಸಿ ಶುಕ್ರವಾರ ಆದೇಶಿಸಿದೆ.
ವಿಶೇಷ ತನಿಖಾ ತಂಡದಲ್ಲಿ (ಎಸ್‌ಐಟಿ)ಆಂಧ್ರಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು, ಒಬ್ಬ ಎಫ್‌ಎಸ್‌ಎಸ್‌ಎಐನ ಹಿರಿಯ ಅಧಿಕಾರಿ ಇರಲಿದ್ದಾರೆ. ಎಸ್‌ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ‘ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ದೇವರಲ್ಲಿ ನಂಬಿಕೆ ಹೊಂದಿರುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಎಸ್‌ಐಟಿ ರಚನೆ ಮಾಡಲಾಗಿದೆ.
ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿದ್ದು, ಎಸ್‌ಐಟಿಯ ಮೇಲೆ ಕೇಂದ್ರದ ಹಿರಿಯ ಅಧಿಕಾರಿ ನಿಗಾ ವಹಿಸಬೇಕು, ಇದರಿಂದ ಜನರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಹೇಳಿದರು. ಇದು ಕೋಟ್ಯಂತರ ಜನರ ನಂಬಿಕೆಯ ಪ್ರಶ್ನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಿರುವಾಗ ಇದೊಂದು ರಾಜಕೀಯ ನಾಟಕವಾಗಬಾರದು, ಸ್ವತಂತ್ರ ಸಂಸ್ಥೆ ಇದ್ದರೆ ಆತ್ಮವಿಶ್ವಾಸ ಮೂಡುತ್ತದೆ. ಸೆಪ್ಟೆಂಬರ್ 30 ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ರಾಜ್ಯವು ನೇಮಿಸಿದ ಎಸ್‌ಐಟಿ ತನಿಖೆಯನ್ನು ಮುಂದುವರಿಸಬೇಕೇ ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂದು ನಿರ್ಧರಿಸಲು ಸಹಾಯ ಮಾಡುವಂತೆ ಪೀಠವು ಮೆಹ್ತಾ ಅವರನ್ನು ಕೇಳಿತ್ತು.