ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಹೆಚ್ಚಿನ ವಿಚಾರಣೆಗಾಗಿ ಮತ್ತೊಮ್ಮೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಜೂನ್ 23ರಂದು ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಸಿಐಡಿ ಪೊಲೀಸರು ಏಳು ದಿನಗಳ ಕಾಲ ಕಸ್ಟಡಿ ಪಡೆದಿದ್ದರು. ಈಗಾಗಲೇ ಸಂತ್ರಸ್ತ ಯುವಕನ ಹೇಳಿಕೆ ದಾಖಲಿಸಿರುವ ಎಸ್ಐಟಿ ಅಧಿಕಾರಿಗಳು, ಸೂರಜ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೂ ಸಹ ಒಳಪಡಿಸಿದ್ದರು.
ಮತ್ತೊಬ್ಬ ಸಂತ್ರಸ್ತ ಸಹ ಸೂರಜ್ ರೇವಣ್ಣ ಅವರ ವಿರುದ್ಧ ದೂರು ನೀಡಿದ್ದು, ಆ ಪ್ರಕರಣದ ತನಿಖೆಯನ್ನೂ ಸಿಐಡಿಗೆ ಒಪ್ಪಿಸಲಾಗಿದೆ. ಇಂದು ಮಧ್ಯಾಹ್ನ ಸೂರಜ್ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿರುವ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಯುವಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್ 22ರಂದು ಸೂರಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.