ಬೆಂಗಳೂರು, ಮೇ 17: ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 40 ವರ್ಷದ ಆಫ್ರಿಕನ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಂಧಿತ ಡೇನಿಯಲ್ ಅರಿಂಜೆ ಒಕ್ವೋಶಾನಿಂದ ಸಿಸಿಬಿ ಪೊಲೀಸರು 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಆರೋಪಿಯು 2023 ರ ಡಿಸೆಂಬರ್ನಲ್ಲಿ ವ್ಯಾಪಾರ ವೀಸಾದ ಮೇಲೆ ಬೆಂಗಳೂರಿಗೆ ಆಗಮಿಸಿ, ಸೋಲದೇವನಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ಬಾಡಿಗೆ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಇತರ ರಾಜ್ಯಗಳಲ್ಲಿರುವ ತಮ್ಮ ಸಹವರ್ತಿಗಳಿಂದ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಸ್ಥಳೀಯ ಕೆಲವು ವ್ಯಕ್ತಿಗಳಿಂದ ಮಾದಕ ವಸ್ತುಗಳನ್ನು ಪಡೆಯುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಅವರು ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ವೃತ್ತಿಪರರನ್ನು ಗುರಿಯಾಗಿಸಿಕೊಂಡಿದ್ದರು ಎಂದು ತನಿಖೆ ವೇಳೆ ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.