ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳ ಗುಂಪು ಬಸ್ ಮಾಡಿಕೊಂಡು ಪ್ರವಾಸಕ್ಕೆ ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ಒಂದು ದುರಂತ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಸುಮಾರು 5 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದಿದೆ. ಒಟ್ಟು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೃಂಗೇರಿ ಪ್ರವಾಸಕ್ಕೆ ಬಂದಿದ್ದರು. ಶೃಂಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಶೃಂಗೇರಿ ಶಾರದಾ ಪೀಠದ ದರ್ಶನಕ್ಕಾಗಿ ಪ್ರವಾಸಕ್ಕೆ ಬಂದಿದ್ದರು. ಸುಮಾರು 25 ಮಂದಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಕಾವಡಿ ಸಮೀಪದ ರಸ್ತೆ ತಿರುವಿನಲ್ಲಿ ಚಾಲಕನ ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ಕಂಡು ಸ್ಥಳೀಯರು ತಕ್ಷಣಕ್ಕೆ ಧಾವಿಸಿದರು. ವಿದ್ಯಾರ್ಥಿಗಳನ್ನು ಬಸ್‌ನಿಂದ ಹೊರತೆಗೆದು ರಕ್ಷಣೆಗೆ ಮಾಡಿದರು.


