ಬೆಂಗಳೂರು: ಧಾರವಾಡ ಜಿಲ್ಲೆಯ ಕುಂದಗೋಳ ಠಾಣೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಭಾಷಣ ಮಾಡಿದ ಆರೋಪದ ಸಂಬಂಧ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಯತ್ನಾಳ್ ವಿರುದ್ಧದ ಪ್ರಕರಣ ವಿಚಾರಣೆಗಾಗಿಯೇ ಒಂದು ದಿನ ಇಡಬೇಕಾಗುತ್ತದೆ ಎಂದು ನ್ಯಾಯಪೀಠ ಮೌಖಿಕವಾಗಿ ತಿಳಿಸಿತು. ಜೊತೆಗೆ, ಕಳೆದ ಲೋಕಸಭಾ ಚುನಾವಣೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದ ಸಂಬಂಧ ಕಲಬುರಗಿ ನಗರದ ರೋಜಾ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505(2) ಅಡಿ ದಾಖಲಾಗಿರುವ ಪ್ರಕರಣ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕುರಿತು ಕೋಮು ದ್ವೇಷ ಮತ್ತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 28ಕ್ಕೆ ಮುಂದೂಡಿತು.