ಬೆಂಗಳೂರು, ಜುಲೈ 30: ಸರಣಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆರಡು ದಿನ ಮುಂದೂಡಿದೆ. ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ ಎಂದು ಜಡ್ಜ್ ಸಂತೋಷ್ ಗಜಾನನ ಭಟ್ ತಿಳಿಸಿದರು.