ಬೆಂಗಳೂರು, ಜುಲೈ 3: ಮಲ ಹೊರುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯಿದೆ 2013ರ ಅಡಿಯಲ್ಲಿರುವ ನಿಯಮಗಳ ಅನುಸಾರ ಕೈಗೊಂಡಿರುವ ಕ್ರಮಗಳ ಕುರಿತಂತೆ ಜುಲೈ 9ರಂದು ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕಳೆದ ವಿಚಾರಣೆ ವೇಳೆ ಪದ್ದತಿ ಇನ್ನೂ ಜೀವಂತವಾಗಿರುವ ಬೇಸರ ವ್ಯಕ್ತಪಡಿಸಿದ್ದ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ನಿಷೇಧದ ನಡುವೆಯೂ ಮಲ ಹೊರುವ ಪದ್ದತಿ ಜಾರಿಯಲ್ಲಿರುವ ಕುರತು ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಅರ್ಜಿ ಮತ್ತು ಅಲ್ ಇಂಡಿಯನ್ ಸೆಂಟ್ರಲ್ ಕೌನ್ಸಿಲ್ ಟ್ರೇಡ್ ಯೂನಿಯನ್ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಪಾಧಿಕಾರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಕಾನೂನಿನಲ್ಲಿ ನಿಷೇಧವಿದ್ದರೂ, ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಜಾರಿಯಲ್ಲಿರುವ ಕ್ರಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಅರ್ಜಿಯಲ್ಲಿ ರಾಜ್ಯದಲ್ಲಿ ನಿಷೇಧದ ನಡುವೆ ಎಷ್ಟು ಮಲ ಹೊರುವ ಪದ್ಧತಿಯ ಪ್ರಕರಣಗಳು ದಾಖಲಾಗಿದೆ. ಅಂತಹ ಘಟನೆಗಳ ತಡೆಯಲು ಸ್ಥಳೀಯ ಸಂಸ್ಥೆಗಳು ಸೂಚನೆ ನೀಡುವುದು ಮತ್ತು ಬಹಿರಂಗವಾಗಿ ಮಲ ಹೊರುವ ಪದ್ದತಿ ನಿಷೇಧಿಸಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನೆ ನೀಡಲು ಅರ್ಜಿಯಲ್ಲಿ ಕೋರಲಾಗಿತ್ತು.