ಬೆಂಗಳೂರು: ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ ಅಂತ್ಯದ ವೇಳೆಗೆ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಯಾವಾಗಲೂ ಚುನಾವಣೆಯಿಲ್ಲದೆ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತದೆ. ಇದರಂತೆ ಪಕ್ಷವು ಅರ್ಹತಾ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿದ್ದು, ವಿವಿಧ ಜಿಲ್ಲೆಗಳಿಗೆ ಪದಾಧಿಕಾರಿಗಳ ನೇಮಕಯನ್ನೂ ಅಂತಿಮಗೊಳಿಸಿದೆ.
ಬಿಜೆಪಿಯ ಹಿರಿಯ ನಾಯಕರೊಬ್ಬರು ಈ ಕುರಿತು ಮಾತನಾಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ರಾಜ್ಯ ಅಧ್ಯಕ್ಷರ ನೇಮಕಾತಿ ಕುರಿತು ಚರ್ಚೆ ನಡೆಸಿದ್ದಾರೆ. ರಾಜ್ಯ ಬಿಜೆಪಿಯೂ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ, ಆದರೆ, ಆರು ಜಿಲ್ಲೆಗಳಲ್ಲಿ ಮಾತ್ರ ಪ್ರಕ್ರಿಯೆ ಬಾಕಿ ಉಳಿದಿವೆ ಎಂದು ಹೇಳಿದರು,
ಏತನ್ಮಧ್ಯೆ, ಕರ್ನಾಟಕ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನಕ್ರೋಶ ರ್ಯಾಲಿಗಳನ್ನು ನಡೆಸುತ್ತಿದ್ದು, ಈ ಯಾಂತ್ರೆ ಪೂರ್ಣಗೊಂಡ ಬಳಿಕ ಈ ತಿಂಗಳ ಅಂತ್ಯ ಅಥವಾ ಮೇ ಮೊದಲ ವಾರದೊಳಗೆ ನೂತನ ಅಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ವಿಜಯೇಂದ್ರ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಜಿಲ್ಲಾ ಪಂಚಾಯತ್ ಮತ್ತು ಬಿಬಿಎಂಪಿ ಸೇರಿದಂತೆ ಈ ವರ್ಷ ಎದುರಾಗುವ ಚುನಾವಣೆಗಳನ್ನು ಅವರ ನೇತೃತ್ವದಲ್ಲೇ ಎದುರಿಸುವ ವಿಶ್ವಾಸವಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆಂದು ಮತ್ತೊಬ್ಬ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಮೊದಲ ಬಾರಿಗೆ ಶಾಸಕರಾದ ಬಿ.ವೈ. ವಿಜಯೇಂದ್ರ ಅವರನ್ನು ನವೆಂಬರ್ 2023 ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು.