ಕಳೆದ ವರ್ಷ 2023 ಆಗಸ್ಟ್ 23 ರಂದು ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿಯ ‘ಶಿವ ಶಕ್ತಿ’ ಬಿಂದುವಿನಲ್ಲಿ ಯಶಸ್ವಿಯಾಗಿ ಇಳಿಯಿತು. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದ ಕ್ಷಣವಿದು. ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಲ್ಯಾಂಡರ್ ಇಳಿಸಿದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಗೆ ಭಾರತವು ಪಾತ್ರವಾಯಿತು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲು ಮುಂದಾಗಿದೆ.
ಆಗಸ್ಟ್ 26 ರಂದು ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಧಾನ ಕಚೇರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಮ್ಮ ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ” ಎಂದು ತಿಳಿಸಿದ್ದರು. ಈ ಮೂಲಕ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದ್ದರು.
ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ತನ್ನ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು (ಎನ್‌ಎಸ್‌ಪಿಡಿ -2024) 2024ರ ಆಗಸ್ಟ್ 23ರಂದು ‘ಚಂದ್ರನನ್ನು ಸ್ಪರ್ಶಿಸುವಾಗ ಜೀವನವನ್ನು ಸ್ಪರ್ಶಿಸುವುದು: ಭಾರತದ ಬಾಹ್ಯಾಕಾಶ ಕಥೆ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಬಾಹ್ಯಾಕಾಶ ಸಾಧನೆಗಳನ್ನು ಪ್ರದರ್ಶಿಸಲು ಕೇಂದ್ರವು ಸರಿಸುಮಾರು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.