ನಗರ(ಜಮ್ಮು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಉಗ್ರರೊಂದಿಗಿನ ಗುಂಡಿನ ಚಕಮಕಿಯು ಶನಿವಾರ 9ನೇ ದಿನಕ್ಕೆ ಕಾಲಿಟ್ಟಿದ್ದು, ಇತ್ತೀಚಿನ ವರ್ಷಗಳಲ್ಲಿ ಕಣಿವೆ ನಾಡಿನಲ್ಲಿ ನಡೆದ ಸುದೀರ್ಘವಾದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ಇದು ಒಂದಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಹುತಾತ್ಮರಾದ ಸೈನಿಕರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಆಗಸ್ಟ್ 1ರಂದು ಪ್ರಾರಂಭವಾದ ಕಾರ್ಯಾಚರಣೆಯಲ್ಲಿ, ಇಲ್ಲಿಯವರೆಗೆ ಕನಿಷ್ಠ ಒಂಬತ್ತು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೊದಲ ಎರಡು ದಿನಗಳಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ ಎಂದು ಭಾರತೀಯ ಸೇನೆ ದೃಢಪಡಿಸಿದೆ.