ಬೆಂಗಳೂರು: ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ ಎಂದು ಮಹಿಳಾ ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಉಡಾಫೆಯಿಂದ ಉತ್ತರಕೊಟ್ಟ ಶಾಸಕ ಆರ್ ವಿ ದೇಶಪಾಂಡೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿವೆ.
ದೇಶಪಾಂಡೆಯವರ ಹೇಳಿಕೆಗೆ ವಿರೋಧ ಪಕ್ಷಗಳು ಮತ್ತು ಪತ್ರಕರ್ತರ ಸಂಘಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ದೇಶಪಾಂಡೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ, ಉತ್ತರ ಕನ್ನಡ ಜಿಲ್ಲೆಯ ಆಸ್ಪತ್ರೆ ಸಮಸ್ಯೆ ಕುರಿತು ಪ್ರಶ್ನೆ ಕೇಳಿದ ಮಹಿಳಾ ಪತ್ರಕರ್ತೆಗೆ ನಿನ್ನ ಹೆರಿಗೆ ಬೇರೆ ಕಡೆ ಮಾಡಿಸುವುದಾಗಿ ಉಡಾಫೆಯ ಉತ್ತರವನ್ನು ಕಾಂಗ್ರೆಸ್‌ನ ಹಿರಿಯ ನಾಯಕ, ಶಾಸಕರಾದ ಆರ್. ವಿ. ದೇಶಪಾಂಡೆ ನೀಡಿದ್ದಾರೆ. ಶಾಸಕರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರ ವಿಚಾರದಲ್ಲಿ ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆ ವ್ಯಕ್ತವಾಗುತ್ತಿದೆ. ಸಮಸ್ಯೆ ಹೇಳಿಕೊಂಡು ಬರುವ ಮಹಿಳೆಯರ ದುಪಟ್ಟಾ ಎಳೆಯುವ ಮುಖ್ಯಮಂತ್ರಿ ಒಂದೆಡೆಯಾದರೆ, ಸಮಸ್ಯೆ ಕುರಿತು ಪ್ರಶ್ನಿಸುವ ಮಹಿಳಾ ಪತ್ರಕರ್ತರಿಗೆ ಉಡಾಫೆಯ ಉತ್ತರ ನೀಡುವ ಕೈ ಶಾಸಕರು ಮತ್ತೊಂದೆಡೆ. ರಾಜ್ಯದಲ್ಲಿ ಮೂಲಭೂತ ಅವಶ್ಯಕತೆಗಳನ್ನು ಕೇಳೋದು ತಪ್ಪಾ? ಅಸಭ್ಯವಾಗಿ ಉತ್ತರ ನೀಡಿದ ಕಾಂಗ್ರೆಸ್ ಶಾಸಕರು ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.