ಬೆಂಗಳೂರು, ಫೆಬ್ರವರಿ 11: ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ಗೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶದ ಸ್ಥಳವನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿಮ್ (ಜಾಗತಿಕ ಹೂಡಿಕೆದಾರರ ಸಮಾವೇಶ) ಉದ್ಘಾಟನೆ ನೆರವೇರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಘನ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ.
ಸಮಾವೇಶದಲ್ಲಿ 19 ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಗುರುತಿಸಿ, ಪುರಸ್ಕರಿಸಲಾಗುತ್ತಿದೆ. ಈ ಕಾರ್ಯಕ್ರಮ ಫೆ.12ರ ಸಂಜೆ ನಡೆಯಲಿದೆ. ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ ಇ.ವಿ., ಜೈವಿಕ ತಂತ್ರಜ್ಞಾನ ಮತ್ತು ಜೀವವಿಜ್ಞಾನ ವಲಯಗಳ ಸಾಧಕ ಉದ್ಯಮಗಳು ಇರಲಿವೆ. ಈವರೆಗೆ ನಡೆದ ಇನ್ವೆಸ್ಟ್ ಕರ್ನಾಟಕದಲ್ಲಿ 7 ಲಕ್ಷ ಕೋಟಿ ರೂ.ವರೆಗೆ ಮಾತ್ರ ಹೂಡಿಕೆ ಮಾಡಲಾಗಿದೆ. ಆದರೆ ಈ ಬಾರೀ 10 ಲಕ್ಷ ಕೋಟಿ ರೂಪಾಯಿಗೂ ಹೂಡಿಕೆಯಾಗುವ ನಿರೀಕ್ಷೆಯಿದೆ.