ಬಳ್ಳಾರಿ,ಅ.17 ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದಲ್ಲಿರುವ ಡಿಜಿಟಲ್ ಸ್ಪರ್ಶ ಹೊಂದಿದ ಸಾರ್ವಜನಿಕ ಗ್ರಂಥಾಲಯಕ್ಕೆ ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು.
ಜಿಲ್ಲಾ ಪಂಚಾಯತ್ ನ ಅನುದಾನ 24 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನಿರ್ಮಾಣಗೊಂಡ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯವು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗಿದ್ದು, ಓದುಗರಿಗೆ ಓದಲುಬೇಕಾದ ಉತ್ತಮ ವಾತಾವರಣ ನಿರ್ಮಾಣ ಮಾಡಲಾಗಿದೆ.
ಈ ಗ್ರಂಥಾಲಯದಲ್ಲಿ 5800ಕ್ಕೂ ಹೆಚ್ಚು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪುಸ್ತಕಗಳ ಸಂಗ್ರಹ, ಕಂಪ್ಯೂಟರ್ ವ್ಯವಸ್ಥೆ ಇದ್ದು, ಡಿಜಿಟಲ್ ಸೌಲಭ್ಯವೂ ಸಹ ಒಳಗೊಂಡಿದೆ ಹಾಗೂ ಓದುಗರ ಆಕರ್ಷಣೆಯ ಕೇಂದ್ರವಾಗಿದೆ.
ಈ ವೇಳೆ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರೂ ಆದ ಉಮಾ ಮಹಾದೇವನ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶ್ರವಣ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಸಿರುಗುಪ್ಪ ತಹಶೀಲ್ದಾರರಾದ ಗೌಸಿಯಾ ಬೇಗಂ, ತಾಪಂ ಇಓ ಪವನ್ ಕುಮಾರ್ ಸೇರಿದಂತೆ ಗ್ರಂಥಾಲಯಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.