ಬೌದ್ಧ ಧರ್ಮದ ವಿದಿ-ವಿಧಾನ ಸರ್ಕಾರಿ ಗೌರವಗಳೊಂದಿಗೆ ವಿ.ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

Ravi Talawar
ಬೌದ್ಧ ಧರ್ಮದ ವಿದಿ-ವಿಧಾನ ಸರ್ಕಾರಿ ಗೌರವಗಳೊಂದಿಗೆ ವಿ.ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ
WhatsApp Group Join Now
Telegram Group Join Now

ಮೈಸೂರು, 30: ತೀವ್ರ ಅನಾರೋಗ್ಯದಿಂದ ಸೋಮವಾರ ನಿಧನರಾದ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿದಿ-ವಿಧಾನದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಸಂಜೆ ನೆರವೇರಿತು.

ಇಂದು ಮೈಸೂರಿನ ಅಶೋಕಪುರಂನ ಡಾ.ಬಿ.ಆರ್ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ವಿ.ಶ್ರೀನಿವಾಸ್ ಪ್ರಸಾದ್ ಮಣ್ಣಲ್ಲಿ ಮಣ್ಣಾದರು. ಬೌದ್ಧ ಧರ್ಮದ ವಿದಿ-ವಿಧಾನದಂತೆ ನೆರವೇರಿತು. ಅಂತ್ಯಕ್ರಿಯೆ ವೇಳೆ ಬೆಂಗಳೂರಿನ ಮಹಾಬೋಧಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿ-ವಿಧಾನಗಳು ನೆರವೇರಿತು.

ಈ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ಬಳಿಕ ಕುಟುಂಬಸ್ಥರು ಗೌರವ ಸಲ್ಲಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ವಿ. ಶ್ರೀನಿವಾಸ್ ಪ್ರಸಾದ್‌ ಅವರಿಗೆ ಸರ್ಕಾರದಿಂದ ಸಕಲ ಸರ್ಕಾರಿ ಗೌರವ ನೀಡಲಾಯ್ತು. ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ರಿಂದ ಗೌರವ ಸಲ್ಲಿಕೆಯಾಯ್ತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರು ಗೌರವ ಸಲ್ಲಿಸಿದರು. ಬಳಿಕ ವಿ. ಶ್ರೀನಿವಾಸ್ ಪ್ರಸಾದ್ ಅವರ ಪತ್ನಿಗೆ ಮೈಸೂರು ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು.

ಅಂತ್ಯಕ್ರಿಯೆಗೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೃತರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ವೇಳೆ ಸಾವಿರಾರು ಜನ ಸೇರಿದ್ದು, ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿತ್ತು.

ಅಂತ್ಯಕ್ರಿಯೆಗೂ ಮುನ್ನ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ವಡೆಯರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ

 

 

 

 

 

 

WhatsApp Group Join Now
Telegram Group Join Now
Share This Article