ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ನಿಗಮದ 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ವಿಚಾರ ಇಡಿ ಬಯಲು ಮಾಡುತ್ತಿದ್ದಂತೆ ಕರ್ನಾಟಕ ಬಿಜೆಪಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
ಮತ್ತೊಂದು ಕಡೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ನಿಯೋಗಕ್ಕೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಹಿರೇಹಾಳ್ ಸಾಥ್ ನೀಡುವ ಸಾಧ್ಯತೆ ಇದೆ. ವಾಲ್ಮಿಕಿ ನಿಗಮದ ಹಣ ಹಾಗೂ ಪರಿಶಿಷ್ಟ ಕಲ್ಯಾಣ ನಿಧಿ ಚುನಾವಣಾ ಅಕ್ರಮಕ್ಕೆ ಬಳಕೆಯಾಗಿದೆ ಎಂದು ಆರೋಪಿಸಿ ಅರುಣ್ ಹಿರೇಹಾಳ್ ಈ ಹಿಂದೆ ಚುನಾವಣಾ ಆಯೋಗಕ್ಕೆ ತಿಳಿಸಿದ್ದರು.