ಬೆಂಗಳೂರು, ಜುಲೈ.13: ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ . ಇನ್ನು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು ಇಂದಿನಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 13, 14 ಮತ್ತು 15 ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಹುತೇಕ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು 115mm ದಿಂದ 205 mm ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆ ಇದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ದಾವಣಗೆರೆ, ಹಾಸನ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆ ಇದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂದಿನಂತೆ ವರುಣನ ಆರ್ಭಟ ಮತ್ತಷ್ಟು ಮುಂದುವರೆಯಲಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.