ನವದೆಹಲಿ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ.
‘ವಯನಾಡ್ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.